ರಾಜ್ಯದ ಹಲವೆಡೆ 4 ದಿನ ಭಾರೀ ಮಳೆ; ಹವಾಮಾನದ ಮುನ್ಸೂಚನೆ

Team Newsnap
1 Min Read

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಕರ್ನಾಟಕದ ಬಹುತೇಕ ಕಡೆ ಮುಂದಿನ ನಾಲ್ಕು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅಂಡಮಾನ್ ಭಾಗದಲ್ಲಿ ವಾಯುಭಾರ ಕುಸಿತ ಹೆಚ್ಚಾಗಿದೆ. ಇದು ಚಂಡಮಾರುತವಾಗಿ ಪರಿವರ್ತನೆಯಾಗುವ ಸಾಧ್ಯತೆಯಿದೆ. ಅ. 10ರಿಂದ 13ರವರೆಗೂ ಕರ್ನಾಟಕದ ಬಹುತೇಕ ಕಡೆ ಮಳೆಯ ಅಬ್ಬರ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಮಳೆ ಹೆಚ್ಚಾಗಲಿದೆ. ಈ ಮೂರು ಜಿಲ್ಲೆಗಳಲ್ಲಿ ಅ. 11ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ರಾಜ್ಯದ ಉತ್ತರ ಒಳನಾಡಿನಲ್ಲಿ ಅ. 10ರಿಂದ 13ರವರೆಗೂ ಮಳೆಯಾಗುವ ಸಂಭವವಿದೆ. ಬೀದರ್, ಕಲಬುರ್ಗಿ, ಬಾಗಲಕೋಟೆ, ಯಾದಗಿರಿ, ರಾಯಚೂರು, ವಿಜಯಪುರದಲ್ಲಿ ಅ. 10ರಿಂದ 12ರವರೆಗೆ ಹವಾಮಾನ ಇಲಾಖೆ ಹಳದಿ ಅಲರ್ಟ್ ಘೋಷಿಸಿದೆ. ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಅ. 10 ಮತ್ತು 11ರಂದು ವ್ಯಾಪಕ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹೆಚ್ಚಿನ ಮಳೆ ಸಂಭವವಿದೆ ಎಂದು ರಾಜ್ಯ ಹವಾಮಾನ ಇಲಾಖೆ ನಿರ್ದೇಶಕ ಸಿಎಸ್ ಪಾಟೀಲ್ ಮಾಹಿತಿ ನೀಡಿದ್ದಾರೆ.

ಕರ್ನಾಟಕ ಮಾತ್ರವಲ್ಲದೆ ಒಡಿಶಾ, ಆಂಧ್ರಪ್ರದೇಶ, ತೆಲಂಗಾಣ, ರಾಯಲಸೀಮಾ, ಮಹಾರಾಷ್ಟ್ರದಲ್ಲಿಯೂ ಮಳೆ ಹೆಚ್ಚಾಗಲಿದೆ. ಅಂಡಮಾನ್ ಮತ್ತು ನಿಕೋಬಾರ್​ನಲ್ಲಿ ನಿನ್ನೆಯಿಂದಲೇ ಮಳೆ ಅಬ್ಬರ ಹೆಚ್ಚಾಗಿದೆ. ಕರ್ನಾಟಕದಲ್ಲಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಲೆನಾಡು, ಕರಾವಳಿ, ತುಮಕೂರು, ಚಿತ್ರದುರ್ಗ, ಕೋಲಾರ, ಮೈಸೂರು, ಮಂಡ್ಯದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

Share This Article
Leave a comment