ಕಾಂಗ್ರೆಸ್ ಗೆ ಕೈ ಕೊಟ್ಟು‌ ಬಂದವರ ಋಣ ತೀರಿಸಲಿದೆ ಬಿಜೆಪಿ : ಈಶ್ವರಪ್ಪ

Team Newsnap
1 Min Read
Image source : google

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವಿದ್ದಾಗ ಯಾರು ರಾಜೀನಾಮೆ ಕೊಟ್ಟು ಕಾಂಗ್ರೆಸ್ ಗೆ ಕೈ ಕೊಟ್ಟು ಬಿಜೆಪಿಗೆ ಬಂದಿದ್ದಾರೆಯೋ, ಅವರ ಋಣ ತೀರಿಸುವ ಜವಾಬ್ದಾರಿ ಬಿಜೆಪಿಯದ್ದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಎಸ್ ಈಶ್ವರಪ್ಪ ಅವರು, ರಾಜರಾಜೇಶ್ವರಿ ನಗರ ಉಪ ಚುನಾವಣೆಗೆ ಬಿಜೆಪಿಯ ಅಭ್ಯರ್ಥಿಯನ್ನಾಗಿ ಮುನಿರತ್ನ ಅವರನ್ನು ಕಣಕ್ಕೆ ಇಳಿಸಿದ್ದೇವೆ. ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಗೆದ್ದೇ ಗೆಲ್ಲುತ್ತೇವೆ, ಮುನಿರತ್ನ ವಿರುದ್ಧದ ಅಕ್ರಮ ಚುನಾವಣೆ ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್ ತೀರ್ಪು ಸ್ವಾಗತಾರ್ಹವಾಗಿದೆ ಎಂದರು.

ಮಹತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ 2020-21ನೇ ಸಾಲಿಗೆ 44.86 ಲಕ್ಷ ಕೂಲಿ ಕಾರ್ಮಿಕರಿಗೆ ಉದ್ಯೋಗ ನೀಡಲಾಗಿದೆ. ಈ ವರ್ಷ 8.34 ಲಕ್ಷ ಕಾಮಗಾರಿಗಳು ಪ್ರಗತಿಯಲ್ಲಿವೆ. ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ 3 ರಡಿ ಕರ್ನಾಟಕ ರಾಜ್ಯಕ್ಕೆ ಒಟ್ಟು 5612.50 ಕಿ.ಮೀ ಹಂಚಿಕೆ ಮಾಡಲಾಗಿದೆ ಎಂದರು.

ಬಿಜೆಪಿ ಕೇಂದ್ರ ಚುನಾವಣಾ ಸಮಿತಿಯು ಆರ್.ಆರ್. ನಗರ ಉಪ ಚುನಾವಣೆಗೆ ಮುನಿರತ್ನ ಅವರ ಹೆಸರನ್ನು ಮಂಗಳವಾರ ಪ್ರಕಟಿಸುತ್ತಿದ್ದಂತೆಯೆ ಬಿಜೆಪಿ ಕಚೇರಿಗೆ ಮುನಿರತ್ನ ಅವರು ಆಗಮಿಸಿದ್ದರು. ಜೊತೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಂದ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ಈಗಾಗಲೇ ಬಿ ಫಾರಂ ಅನ್ನು ಪಡೆದುಕೊಂಡಿದ್ದಾರೆ.

ಮಂಗಳವಾರ ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ ತುಮಕೂರು ಜಿಲ್ಲೆಯ ಶಿರಾ ಕ್ಷೇತ್ರದ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ನಿರೀಕ್ಷೆಯಂತೆ ಡಾ. ರಾಜೇಶ್ ಗೌಡ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ನವೆಂಬರ್ 3 ರಂದು ಉಪ ಚುನಾವಣೆ ನಡೆಯಲಿದೆ.

Share This Article
Leave a comment