November 22, 2024

Newsnap Kannada

The World at your finger tips!

politics,election,congress

ರೈತರ ರಕ್ಷಣೆಗೆ ಪೂರಕ ಕ್ರಮಕ್ಕೆ ಸಹಕರಿಸಿ

Spread the love


ಬೆಂಗಳೂರು: ರಾಜ್ಯದ ರೈತರ ರಕ್ಷಣೆಗೆ ಪೂರಕವಾಗಿ ಕ್ರಮಕೈಗೊಳ್ಳುವಂತೆ ಕೇಂದ್ರದ ಬರ ಅಧ್ಯಯನ ತಂಡಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ರಾಜ್ಯದ ಬರ ಪರಿಸ್ಥಿತಿ ಅಧ್ಯಯನಕ್ಕಾಗಿ ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ತಂಡದ ಅಧಿಕಾರಿಗಳು ಗುರುವಾರ ಸಿಎಂ ಭೇಟಿಗೆ ಆಗಮಿಸಿದ್ದ ಸಂದರ್ಭ ಅವರು, ತಂಡಕ್ಕೆ ರಾಜ್ಯದ ಬರ ಪರಿಸ್ಥಿತಿಯನ್ನು ವಿವರಿಸಿದರು. ಪ್ರವಾಸದ ಸಂದರ್ಭದಲ್ಲಿ ರಾಜ್ಯದ ವಸ್ತುಸ್ಥಿತಿಯನ್ನು ಅರಿತು ಕೇಂದ್ರಕ್ಕೆ ಮನವರಿಕೆ ಮಾಡುವ ಮೂಲಕ ರೈತರ ಸಂಕಷ್ಟಕ್ಕೆ ಕೇಂದ್ರ ಸರ್ಕಾರ ತ್ವರಿತವಾಗಿ ಸ್ಪಂದಿಸಲು ಸಹಕರಿಸಬೇಕೆಂದು  ಹೇಳಿದರು.

ಕೇಂದ್ರದ ಮಾರ್ಗಸೂಚಿಯನ್ವಯ 195 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಇನ್ನೂ 32 ತಾಲ್ಲೂಕುಗಳು ನಿಗದಿತ ಮಾನದಂಡಗಳನ್ನು ಪೂರೈಸುತ್ತಿವೆ. ರಾಜ್ಯದಲ್ಲಿ ನೈಋತ್ಯ ಮುಂಗಾರು ವಿಳಂಬದಿಂದ ಹಾಗೂ ಮಳೆಯ ಕೊರತೆಯಿಂದ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ರಾಜ್ಯದಲ್ಲಿ ಶೇ. 90ರಷ್ಟು ಬಿತ್ತನೆ ಆಗಿದೆ. ಅದರಲ್ಲಿ 42 ಲಕ್ಷ ಹೆಕ್ಟೇರ್‍ಗೂ ಹೆಚ್ಚು ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ರೈತರ ಜಮೀನಿನಲ್ಲಿ ಹಸಿರು ಕಾಣಿಸಿದರೂ ಬೆಳೆಯಿಲ್ಲದ ಪರಿಸ್ಥಿತಿ ಉಂಟಾಗಿದೆ. ರಾಜ್ಯದಲ್ಲಿ ಹಸಿರು ಬರ ತಲೆದೋರಿದೆ ಎಂದು ವಾಸ್ತವ ಪರಿಸ್ಥಿತಿಯನ್ನು ವಿವರಿಸಿದರು.

ಆಗಸ್ಟ್ ತಿಂಗಳಲ್ಲಿ ಕಳೆದ 122 ವರ್ಷಗಳಲ್ಲೇ ಅತಿ ಕಡಿಮೆ ಮಳೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಅಣೆಕಟ್ಟುಗಳು ಬರಿದಾಗಿವೆ. ಸೆಪ್ಟೆಂಬರ್ ತಿಂಗಳಲ್ಲಿ ಅಲ್ಲಲ್ಲಿ ಚದುರಿದಂತೆ ಮಳೆಯಾಗಿದೆ. ಮುಂಗಾರು ಮುಗಿಯುತ್ತ ಬಂದಿದೆ. ಇದರಿಂದ ಕುಡಿಯುವ ನೀರಿನ ಕೊರತೆ, ವಿದ್ಯುತ್ ಕೊರತೆಯ ಆತಂಕವನ್ನೂ ಸೃಷ್ಟಿಸಿದೆ ಎಂದು ವಿವರಿಸಿದರು.
ರಾಜ್ಯದಲ್ಲಿ ಸಣ್ಣ ಮತ್ತು ಮಧ್ಯಮ ರೈತರ ಸಂಖ್ಯೆ ಹೆಚ್ಚಿದೆ.

ಇವರ ದತ್ತಾಂಶವನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ಸಂಗ್ರಹಿಸಲಾಗಿದೆ. ಜೊತೆಗೆ ಬೆಳೆ ಸಮೀಕ್ಷೆಯನ್ನು ಸಹ ಡಿಜಿಟೈಸ್ ಮಾಡಿರುವುದರಿಂದ ನಿಖರ ಮಾಹಿತಿ ದೊರೆಯಲಿದೆ. ರೈತರಿಗೆ ಎನ್.ಡಿ.ಆರ್.ಎಫ್. ಮಾರ್ಗ ಸೂಚಿಯಲ್ಲಿ ನಿಗದಿ ಪಡಿಸಿರುವ ಬೆಳೆ ನಷ್ಟ ಪರಿಹಾರ ಅತ್ಯಂತ ಕಡಿಮೆ ಇದೆ. ಇದನ್ನು ಹೆಚ್ಚಿಸುವ ಅಗತ್ಯವಿದೆ. ರಾಜ್ಯದಲ್ಲಿ ಹೆಚ್ಚುವರಿಯಾಗಿ ಬೆಳೆ ನಷ್ಟ ಪರಿಹಾರ ನೀಡಲಾಗುತ್ತಿದೆ ಎಂದು ತಿಳಿಸಿದರು.

ಕೊಡಗು ಜಿಲ್ಲೆಯಲ್ಲಿ ಮಳೆ ಕೊರತೆಯಿಂದಾಗಿ ಕೆಆರ್‍ಎಸ್. ಅಣೆಕಟ್ಟಿನಲ್ಲಿ ನೀರಿನ ಮಟ್ಟ ಕಡಿಮೆಯಾಗಿದೆ. ಕುಡಿಯುವ ನೀರಿಗಾಗಿಯೇ ರಾಜ್ಯಕ್ಕೆ 33 ಟಿಎಂಸಿ ನೀರಿನ ಅವಶ್ಯಕತೆಯಿದೆ. ಆದರೆ ಮಳೆಯ ಕೊರತೆಯಿಂದ ಆತಂಕದ ಸ್ಥಿತಿ ಎದುರಾಗಿದೆ ಎಂದು ವಿವರಿಸಿದರು.ಅಗತ್ಯಕ್ಕಿಂತ ಅರ್ಧ ನೀರು : ಡಿಕೆಶಿ

ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಕಂದಾಯ ಇಲಾಖೆ ಕಾರ್ಯದರ್ಶಿ ರಶ್ಮಿ ವಿ. ಮಹೇಶ್, ಕೇಂದ್ರ ತಂಡದ ಮುಖ್ಯಸ್ಥ ಅಜಿತ್ ಕುಮಾರ್ ಸಾಹು ಹಾಗೂ ತಂಡದ ಸದಸ್ಯರು ಉಪಸ್ಥಿತರಿದ್ದರು.

Copyright © All rights reserved Newsnap | Newsever by AF themes.
error: Content is protected !!