ಕೆಎಎಸ್​ ಅಧಿಕಾರಿ ಡಾ. ಬಿ. ಸುಧಾ ಮನೆ, ಕಚೇರಿ ಸೇರಿ 6 ಕಡೆ ಎಸಿಬಿ ದಾಳಿ

Team Newsnap
1 Min Read

ಅಕ್ರಮ ಆಸ್ತಿ ಗಳಿಕೆ ಆರೋಪದಲ್ಲಿ ಕೆಎಎಸ್​ ಅಧಿಕಾರಿ ಡಾ. ಬಿ. ಸುಧಾ ಅವರ ಮನೆ ಮತ್ತು ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ಶನಿವಾರ ದಾಳಿ ನಡೆಸಿದ್ದಾರೆ.

ಬೆಂಗಳೂರಿನ ಮನೆ, ಕಚೇರಿ ಸೇರಿದಂತೆ 6 ಕಡೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ಹಿಂದೆ ಬಿಡಿಎನಲ್ಲಿ ವಿಶೇಷ ಭೂ ಸ್ವಾಧೀನಾಧಿಕಾರಿಯಾಗಿದ್ದ ಡಾ. ಸುಧಾ ವಿರುದ್ಧ ಎಸಿಬಿಯಲ್ಲಿ ಅಕ್ರಮ ಆಸ್ತಿ ಗಳಿಕೆ ಹಾಗೂ ಅವ್ಯವಹಾರದ ಕುರಿತಾಗಿ ದೂರು ದಾಖಲಾಗಿತ್ತು.

ಪ್ರಸ್ತುತ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನದ ಆಡಳಿತ ಅಧಿಕಾರಿ ಆಗಿರುವ ಕೆಎಎಸ್​ ಅಧಿಕಾರಿ ಡಾ. ಬಿ. ಸುಧಾ ಅವರ ಮನೆ ಮೇಲೆ ಇಂದು ಎಸಿಬಿ ದಾಳಿ ನಡೆಸಲಾಗಿದೆ. ಬೆಂಗಳೂರಿನ ಕೊಡಿಗೇಹಳ್ಳಿ ನಿವಾಸ, ಯಲಹಂಕದಲ್ಲಿ ಒಂದು ಫ್ಲ್ಯಾಟ್​, ಬ್ಯಾಟರಾಯನಪುರ ಹಾಗೂ ಬಿಇಎಂಎಲ್ ಮನೆ ಮೇಲೆ ದಾಳಿ ನಡೆಸಲಾಗಿದೆ. ಜೊತೆಗೆ, ಉಡುಪಿ ಜಿಲ್ಲೆಯ ಹೆಬ್ರಿ ಬಳಿಯ ತೆಂಕಬಟ್ಟಿನ ಮನೆ ಮೇಲೂ ದಾಳಿ ನಡೆಸಲಾಗಿದೆ. ಎಸಿಬಿ ಅಧಿಕಾರಿಗಳಿಂದ ದಾಳಿ ಮುಂದುವರೆದಿದೆ.

ಬಿಡಿಎಯಲ್ಲಿ ಭೂ ಸ್ವಾಧೀನಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ವೇಳೆ ಡಾ. ಸುಧಾ ಭೂ ಪರಿಹಾರ ನೀಡುವ ವಿಚಾರದಲ್ಲಿ ತಮ್ಮ ಗಂಡ ಮತ್ತು ದಲ್ಲಾಳಿಗಳ ಮೂಲಕ ಲಂಚ ಪಡೆಯುತ್ತಿದ್ದರು. ಅಲ್ಲದೆ, ತಮ್ಮ ಸಂಬಳಕ್ಕಿಂತಲೂ ಆದಾಯದ ಮೊತ್ತ ಜಾಸ್ತಿ ಇದೆ ಎಂದು ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಾಹಾಂ ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದರು. ಈ ಪ್ರಕರಣದ ಬಗ್ಗೆ ವಿಚಾರಣೆ ನಡೆಸಿ, ವರದಿ ಸಲ್ಲಿಸುವಂತೆ ಎಸಿಬಿಗೆ ಆದೇಶಿಸಲಾಗಿತ್ತು.

ಈ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ಉಡುಪಿಯಲ್ಲಿರುವ ಡಾ. ಸುಧಾ ಮನೆ ಮೇಲೂ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ, ದಾಖಲಾತಿಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.

Share This Article
Leave a comment