ಪಂಚಮಸಾಲಿಗೆ 2ಎ ಮೀಸಲಾತಿ ಬದಲಾದ ಸಿಎಂ ನಿಲುವು: ಅಧ್ಯಯನಕ್ಕೆ ಸೂಚನೆ

Team Newsnap
1 Min Read

ಪಂಚಮಸಾಲಿ ಲಿಂಗಾಯತರಿಗೆ 2ಎ ಮೀಸಲಾತಿಗಾಗಿ ಕೇಂದ್ರಕ್ಕೆ ನಿಯೋಗ ಹೋಗಿ ಎಂದು ವಿಧಾನಸಭೆಯಲ್ಲಿ ಶುಕ್ರವಾರ ಹೇಳಿದ್ದ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿಕೆಗೆ ವ್ಯಾಪಕವಾಗಿ ಆಕ್ರೋಶ ವ್ಯಕ್ತವಾದ ನಂತರ ಮೀಸಲಾತಿ ಬದಲಾವಣೆ ಕುರಿತು ಅಧ್ಯಯನ ನಡೆಸಲು ಸಿಎಂ ಹಿಂದುಳಿದ ವರ್ಗಗಳ ಆಯೋಗಕ್ಕೆ ಸೂಚನೆ ನೀಡಿದ್ದಾರೆ.

2a

ವಿಧಾನಸಭೆಯಲ್ಲಿ ಅದಿವೇಶನದಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಪ್ರಸ್ತಾವಕ್ಕೆ ಮುಖ್ಯಮಂತ್ರಿ ಉತ್ತರ ನೀಡಿ ಕುಳಿತ ಬಳಿಕ ಬಸನಗೌಡ ಪಾಟೀಲ ಯತ್ನಾಳ್‌, ಪಂಚಮಸಾಲಿ ಹಾಗೂ ಹಾಲುಮತ ಸಮುದಾಯಕ್ಕೆ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ, ಈ ವಿಷಯದ ಬಗ್ಗೆ ಮುಖ್ಯಮಂತ್ರಿ ಉತ್ತರ ನೀಡಬೇಕು ಎಂದು ಪಟ್ಟು ಹಿಡಿದರು.

ಈ ಸಂಬಂಧ ಪ್ರತಿಕ್ರಿಯಿಸಿದ ಸಿಎಂ ಯಡಿಯೂರಪ್ಪ, ರಾಜ್ಯದಲ್ಲಿ ನಮ್ಮದೇ ಪಕ್ಷ, ಕೇಂದ್ರೆಲ್ಲಿಯೂ ನಮ್ಮದೆ ಪಕ್ಷ ಇದೆ. ಈ ವಿಚಾರದಲ್ಲಿ ನಾನು ಏಕಾಏಕಿ ತೀರ್ಮಾನ ತೆಗೆದುಕೊಳ್ಳಲು ಸಾಧ್ಯವಿಲ್ಲ. ಅಲ್ಲದೆ, ನಮ್ಮದು ಪ್ರಾದೇಶಿಕ ಪಕ್ಷವಲ್ಲ. 25 ಮಂದಿ ಸಂಸದರಿದ್ದಾರೆ. ನೀವು ಅವರ ನಿಯೋಗ ಕರೆದುಕೊಂಡು ಹೋಗಿ ಪರಿಹಾರ ಕಂಡುಕೊಳ್ಳಿ ಎಂದು ಯತ್ನಾಳ್‌ ಅವರಿಗೆ ಹೇಳಿದ್ದರು.

ಈ ಹೇಳಿಕೆ ಬೆನ್ನೆಲ್ಲೇ ಹಲವಾರು ಟೀಕೆಗಳು ಉಂಟಾಯಿತು. ಪಂಚಮಸಾಲಿ ಮೀಸಲಾತಿ ಹೋರಾಟದ ಮುಂಚೂಣಿಯಲ್ಲಿರುವ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರು ಸಿಎಂ ಯಡಿಯೂರಪ್ಪ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದೂ ಆಗ್ರಹಿಸಿದ್ದರು.

ಈ ಬಗ್ಗೆ ನಿಲುವು ಬದಲಿಸಿದ ಸಿಎಂ ಶುಕ್ರವಾರ ಸಂಜೆಯೇ ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ 2-ಎ ಮೀಸಲಾತಿ ನೀಡುವ ಬಗ್ಗೆ ಸಮಗ್ರ ಅಧ್ಯಯನ ನಡೆಸಿ ವರದಿ ಸಲ್ಲಿಸುವಂತೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಸೂಚಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿದ ಯಡಿಯೂರಪ್ಪ, ‘ರಾಜ್ಯದ ಮುಖ್ಯಮಂತ್ರಿಯಾಗಿ ಎಲ್ಲ ಸಮುದಾಯಗಳ ಒಳಿತಿಗೆ ನಾನು ಬದ್ಧ. ಇಂತಹ ಗಂಭೀರ ವಿಚಾರದ ಬಗ್ಗೆ ತರಾತುರಿಯಲ್ಲಿ ನಿರ್ಧಾರ ತೆಗೆದುಕೊಳ್ಳದೇ, ತಜ್ಞರೊಂದಿಗೆ ಸಮಾಲೋಚಿಸಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತೇನೆ. ಇದಕ್ಕೆ ಎಲ್ಲರೂ ಸಹಕಾರ ನೀಡಬೇಕು’ ಎಂದು ಕೋರಿದ್ದಾರೆ.

Share This Article
Leave a comment