ಭದ್ರಾ ಮೇಲ್ದಂಡೆ,ಎತ್ತಿನಹೊಳೆ ಯೋಜನೆ ಪ್ರಗತಿ ಪರಿಶೀಲಿಸಿದ ಸಿಎಂ

Team Newsnap
1 Min Read

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಂಗಳವಾರ ಬೆಂಗಳೂರಿನಲ್ಲಿ‌ ಎತ್ತಿನಹೊಳೆ ಮತ್ತು ಭದ್ರಾ ಮೇಲ್ದಂಡೆ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು.

ಕಾಮಗಾರಿಗಳನ್ನು ನಿಗದಿತ ಕಾಲಾವಧಿಯಲ್ಲಿ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು..

ಎತ್ತಿನಹೊಳೆ ಯೋಜನೆಯಲ್ಲಿ ಈ ವರೆಗೆ 9003.86 ಕೋಟಿ ರೂ. ವೆಚ್ಚವಾಗಿದೆ. ಮೊದಲ ಹಂತದಲ್ಲಿ ಜುಲೈ ಅಂತ್ಯದೊಳಗೆ ವೇದಾವತಿ ವ್ಯಾಲಿಗೆ ನೀರು ಹರಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಸೂಚನೆ ನೀಡಿದರು.

ಎತ್ತಿನಹೊಳೆ ಯೋಜನೆಯು ಏಳು ಜಿಲ್ಲೆಯ 29 ತಾಲ್ಲೂಕುಗಳ 6557 ಗ್ರಾಮಗಳ 68 ಲಕ್ಷಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರು ಒದಗಿಸಲಿದೆ.

ಭದ್ರಾ ಮೇಲ್ದಂಡೆ ಯೋಜನೆ ರಾಷ್ಟ್ರೀಯ ಯೋಜನೆಯಾಗಿ ಘೋಷಣೆ ಮಾಡುವ ಪ್ರಕ್ರಿಯೆ ಅಂತಹಂತದಲ್ಲಿ ಇದೆ. ಸಚಿವ ಸಂಪುಟದ ಅನುಮೋದನೆ ಬಾಕಿಯಿದೆ. ಈ ಬಗ್ಗೆ ಕೇಂದ್ರ ಸಚಿವರೊಂದಿಗೆ ದೂರವಾಣಿ ಮೂಲಕ‌ ಚರ್ಚಿಸಲಾಗಿದ್ದು ಶೀಘ್ರ ‌ಅನುಮೋದನೆ ನೀಡಲು‌ ಕೋರಲಾಗಿದೆ. ಅಗತ್ಯ ಬಿದ್ದರೆ ಕೇಂದ್ರ ಸಚಿವರನ್ನು ಖುದ್ದು ಭೇಟಿ ಮಾಡಿ‌ ಮಂಜೂರಾತಿಗೆ ಒತ್ತಾಯಿಸಲಾಗುವುದು ಎಂದು ತಿಳಿಸಿದರು..

ಈ ಯೋಜನೆಯಡಿ ಕಳೆದ ಎರಡು ವರ್ಷಗಳಲ್ಲಿ 2362.62 ಕೋಟಿ ರೂ. ಗಳ ಆರ್ಥಿಕ ಪ್ರಗತಿಯನ್ನು ಸಾಧಿಸಲಾಗಿದ್ದು, ಈ ಯೋಜನೆಯಿಂದ ತುಮಕೂರು, ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಗಳಿಗೆ ಅನುಕೂಲವಾಗಲಿದೆ.

ನೀರಾವರಿ ಯೋಜನೆಗಳನ್ನು ಯಾವುದೇ ಲೋಪವಿಲ್ಲದಂತೆ ಅನುಷ್ಠಾನಗೊಳಿಸಬೇಕು. ಯಾವುದೇ ಲೋಪ ದೋಷಗಳು ಕಂಡು ಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಸಭೆಯಲ್ಲಿ ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣರೆಡ್ಡಿ, ಜಲಸಂಪನ್ಮೂಲ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್, ಜಲಸಂಪನ್ಮೂಲ ಇಲಾಖೆಯ ಕಾರ್ಯದರ್ಶಿ ಲಕ್ಷ್ಮಣ ರಾವ್ ಪೇಶ್ವೆ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Share This Article
Leave a comment