ನನ್ನ ಸಾವಿಗೆ ಸಚಿವ ಈಶ್ವರಪ್ಪನೇ ನೇರ ಕಾರಣ – ಡೆತ್‍ನೋಟ್ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Team Newsnap
1 Min Read

ಗ್ರಾಮೀಣ ಅಭಿವೃದ್ದಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಶೇ. 40 ಪರ್ಸೆಂಟೇಜ್ ಆರೋಪ ಮಾಡಿದ್ದ ಬೆಳಗಾವಿ ಬಿಜೆಪಿ ಕಾರ್ಯಕರ್ತ ಹಾಗೂ ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಮಾಧ್ಯಮದ ಪ್ರತಿನಿಧಿಗಳಿಗೆ ವಾಟ್ಸಪ್ ಸಂದೇಶ ರವಾನಿಸಿ ಉಡುಪಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಬೆಳಗಾವಿ ತಾಲೂಕಿನ ಹಿಂಡಲಗಾ ಗ್ರಾಮದ ಗುತ್ತಿಗೆದಾರ ಮತ್ತು ಬಿಜೆಪಿ ಕಾರ್ಯಕರ್ತರಾಗಿದ್ದ ಸಂತೋಷ್ ಪಾಟೀಲ್ ಮಾಧ್ಯಮ ಪತ್ರಿನಿಧಿಗಳಿಗೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ತಡರಾತ್ರಿ ವಾಟ್ಸಪ್ ಮೆಸೇಜ್ ಮಾಡಿದ್ದಾರೆ.

ಈ ಕುರಿತಂತೆ ಮಾಧ್ಯಮಪ್ರತಿನಿಧಿಗಳು ಬೆಳಗಾವಿ ಪೊಲೀಸರಿಗೆ ಮಾಹಿತಿ ನೀಡಿದ ನಂತರ , ಅವರಿಗಾಗಿ ಹುಡುಕಾಟ ನಡೆಸಿದ ಪೊಲೀಸರಿಗೆ ಉಡುಪಿಯ ಲಾಡ್ಜ್‌ವೊಂದರಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಸಂತೋಷ್ ಪಾಟೀಲ್ ಪತ್ತೆಯಾಗಿದ್ದಾರೆ.

ಮೊಬೈಲ್‌ನಲ್ಲಿ ವಾಟ್ಸಾಪ್ ಸಂದೇಶ ಕಳುಹಿಸಿದ್ದ ಸಂತೋಷ್ ಪಾಟೀಲ್ ನನ್ನ ಸಾವಿಗೆ ಕೆ.ಎಸ್.ಈಶ್ವರಪ್ಪ ಕಾರಣ ಎಂದು ಉಲ್ಲೇಖಿಸಿದ್ದರು.

ಈಶ್ವರಪ್ಪ ಅವರಿಗೆ ಶಿಕ್ಷೆಯಾಗಬೇಕು. ನನ್ನೆಲ್ಲಾ ಆಸೆ ಬದಿಗೊತ್ತಿ ಆತ್ಮಹತ್ಯೆ ನಿರ್ಧಾರ ಮಾಡಿದ್ದೇನೆ. ನನ್ನ ಹೆಂಡತಿ ಮಕ್ಕಳಿಗೆ ಪ್ರಧಾನಿಗಳು, ಮುಖ್ಯಮಂತ್ರಿಗಳು, ಬಿ.ಎಸ್.ಯಡಿಯೂರಪ್ಪ ಸಹಾಯ ಮಾಡಬೇಕೆಂದು ಪತ್ರದಲ್ಲಿ ತಿಳಿಸಿದ್ದಾರೆ.

ಪತ್ರದಲ್ಲಿ ಏನಿದೆ ?

ನನ್ನ ಸಾವಿಗೆ ನೇರ ಕಾರಣ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಕೆ.ಎಸ್. ಈಶ್ವರಪ್ಪ. ಕರ್ನಾಟಕ ಸರ್ಕಾರದಿಂದ ಇವರಿಗೆ ತಕ್ಕ ಶಿಕ್ಷೆ ಆಗಬೇಕು.

ನನ್ನೆಲ್ಲಾ ಆಸೆಗಳನ್ನು ಬದಿಗೊತ್ತಿ ಈ ನಿರ್ಧಾರ ಮಾಡಿರುತ್ತೇನೆ. ನನ್ನ ಹೆಂಡತಿ, ಮಗುವಿಗೆ ಸರ್ಕಾರ ಅಂದರೆ ಪ್ರಧಾನ ಮಂತ್ರಿಗಳು ಹಾಗೂ ಮಾನ್ಯ ಮುಖ್ಯ ಮಂತ್ರಿಗಳು ಹಾಗೂ ನಮ್ಮ ಹಿರಿಯ ಲಿಂಗಾಯತ ನಾಯಕ ಬಿ.ಎಸ್.ಯಡಿಯೂರಪ್ಪನವರು ಎಲ್ಲರೂ ಸಹಾಯಹಸ್ತ ನೀಡಬೇಕೆಂದು ಕೈ ಮುಗಿದು ಕೇಳಿಕೊಳ್ಳುತ್ತೇನೆ.

ಮಾಧ್ಯಮ ಮಿತ್ರರಿಗೆ ಕೋಟಿ ಕೋಟಿ ಧನ್ಯವಾದಗಳು. ನನ್ನ ಜೊತೆ ಬಂದ ನನ್ನ ಗೆಳಯರಾದ ಸಂತೋಷ್ ಮತ್ತು ಪ್ರಶಾಂತ್‍ಗೆ ನಾನು ಪ್ರವಾಸ ಹೋಗೋಣ ಎಂದು ನನ್ನ ಜೊತೆಗೆ ಕರೆದುಕೊಂಡ ಬಂದಿರುತ್ತೇನೆ ಅಷ್ಟೇ.

ಅವರಿಗೂ ನನ್ನ ಸಾವಿಗೂ ಯಾವುದೇ ಸಂಬಂಧ ಇರುವುದಿಲ್ಲ ಎಂದಿದ್ದಾರೆ.

Share This Article
Leave a comment