December 28, 2024

Newsnap Kannada

The World at your finger tips!

nandibetta

ನಂದಿಗಿರಿಧಾಮ ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿ ಅಭಿವೃದ್ಧಿ: ಸಚಿವ ಡಾ.ಕೆ.ಸುಧಾಕರ್ ಪ್ರಕಟ

Spread the love
  • 10 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ
  • ರೋಪ್ ವೇ ಅಳವಡಿಕೆಯ ಕನಸು ನನಸು

ಚಿಕ್ಕಬಳ್ಳಾಪುರದ ಜಿಲ್ಲೆಯ ನಂದಿ ಗಿರಿಧಾಮವನ್ನು ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿಸಿ ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಪ್ರಕಟಿಸಿಸಿದರು.

ನಂದಿಬೆಟ್ಟ ಭೇಟಿ ನೀಡಿ ಪರಶೀಲನೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ನಂದಿಬೆಟ್ಟ ಹಾಗೂ ಸುತ್ತಮುತ್ತಲಿನ ಪ್ರದೇಶ ಆಕರ್ಷಕವಾಗಿದೆ. ಇದಕ್ಕೆ ಐತಿಹಾಸಿಕ, ಧಾರ್ಮಿಕ ಪ್ರಾಮುಖ್ಯವಿದ್ದು, ವಿಶೇಷವಾದ ಸಸ್ಯಸಂಪತ್ತು ಇದೆ. ಇವೆಲ್ಲವನ್ನೂ ಗಮನಿಸಿ ಪ್ರವಾಸೋದ್ಯಮ ಕ್ಷೇತ್ರವಾಗಿಸಬಹುದು. ಇದಕ್ಕಾಗಿ ನಮ್ಮ ಸರ್ಕಾರ ಈಗಾಗಲೇ 10 ಕೋಟಿ ರೂ. ಅನುದಾನ ನೀಡಿದೆ ಎಂದು ಮಾಹಿತಿ ನೀಡಿದರು.

ಕಳೆದ 15 ವರ್ಷಗಳಿಂದ ರೋಪ್ ವೇ ಬೇಕು ಎಂದು ಜನರು ಬೇಡಿಕೆ ಇಡುತ್ತಿದ್ದಾರೆ. ಅಂತಾರಾಷ್ಟ್ರೀಯ ಕಂಪನಿಯೊಂದು ಇದನ್ನು ಮಾಡಲು ಮುಂದಾಗಿ ನಂತರ ಕಾರಣಾಂತರದಿಂದ ಯೋಜನೆ ಕೈ ಬಿಟ್ಟಿತ್ತು. ಈಗ ಆ ಕನಸು ನನಸಾಗಲಿದೆ. ಇಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲು 10 ಎಕರೆಗೂ ಹೆಚ್ಚು ಜಾಗವನ್ನು ಪಡೆಯಲು ಪ್ರಯತ್ನಿಸಲಾಗಿದೆ. ಈ ರೀತಿ ಮಾಸ್ಟರ್ ಪ್ಲಾನ್ ಮಾಡಿ ಅನುಷ್ಠಾನಗೊಳಿಸಲಾಗುವುದು. ಮೂರ್ನಾಲ್ಕು ತಿಂಗಳಲ್ಲಿ ಕಾಮಗಾರಿ ಮುಗಿಯಬಹುದು ಎಂದರು.

ತಕ್ಷಣದಲ್ಲಿ ಟೆಂಡರ್ ಆಗಿ ಎಲ್ಲ ಬಗೆಯ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತದೆ. ನಂದಿಬೆಟ್ಟವನ್ನು ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿ ರೂಪುಗೊಳಿಸಬೇಕಿದೆ. ಈ ತಾಣವು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸುಮಾರು 30 ಕಿ.ಮೀ. ದೂರದಲ್ಲಿದೆ. ಬೆಂಗಳೂರು ನಗರದಿಂದ ಒಂದು ಗಂಟೆಯಲ್ಲಿ ಬರಬಹುದು. ಈ ಪ್ರದೇಶವನ್ನು ಅಭಿವೃದ್ಧಿಪಡಿಸಿ ಪ್ರವಾಸಿಗರನ್ನು ಆಕರ್ಷಿಸುವ ನಿಟ್ಟಿನಲ್ಲಿ ಕ್ರಮ ವಹಿಸಲಾಗಿದೆ ಎಂದರು.

ಎಕೋ-ಟೂರಿಸಂ, ಸುತ್ತಮುತ್ತಲಿನ 5 ಬೆಟ್ಟಗಳಿಗೆ ಚಾರಣ ದಾರಿಗಳು, ಪುರಾತತ್ವ ಸ್ಮಾರಕಗಳು, ನೆಲ್ಲಿಕಾಯಿ ಬಸವಣ್ಣ ಮತ್ತು ಮಂಟಪಗಳು ಸಂರಕ್ಷಣೆ, ಸುಂದರೀಕರಣ ಸೇರಿದಂತೆ ವಿಶ್ವದರ್ಜೆಯ ಪ್ರವಾಸಿ ಸೌಲಭ್ಯಗಳನ್ನು ಕಲ್ಪಿಸಲಾಗುವುದು. ಮುಖ್ಯಮಂತ್ರಿಗಳು ಮಂಡಿಸಲಿರುವ ಆಯವ್ಯಯದಲ್ಲಿ ಪ್ರವಾಸೋದ್ಯಮ ಕ್ಷೇತ್ರಕ್ಕೆ ವಿಶೇಷ ಒತ್ತು ನೀಡಲಿದ್ದಾರೆ. ರಾಜ್ಯದಲ್ಲಿ ವಿಶಿಷ್ಟವಾದ ಪ್ರವಾಸಿ ತಾಣಗಳಿವೆ ಎಂದರು.

ಪ್ಲಾಸ್ಟಿಕ್ ನಿಷೇಧ:
ನಂದಿಬೆಟ್ಟದಲ್ಲಿ ಪ್ಲಾಸ್ಟಿಕ್ ವಸ್ತುಗಳ ಬಳಕೆ ಸಂಪೂರ್ಣ ನಿಷೇಧಿಸಲು ತೀರ್ಮಾನಿಸಲಾಗಿದೆ. ಯಾವುದೇ ರೀತಿಯ ಪ್ಲಾಸ್ಟಿಕ್ ಒಳಗೆ ತೆಗೆದುಕೊಂಡು ಹೋಗಲು ಅವಕಾಶ ನೀಡದಿರಲು ನಿರ್ಧರಿಸಲಾಗಿದೆ ಎಂದು ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

Copyright © All rights reserved Newsnap | Newsever by AF themes.
error: Content is protected !!