ಖಾಸಗಿ-ಸರ್ಕಾರಿ ಸಹಭಾಗಿತ್ವದಲ್ಲಿ ವೈದ್ಯಕೀಯ ಕಾಲೇಜುಗಳ ನಿರ್ಮಾಣಕ್ಕೆ ಪ್ರಯತ್ನ: ಸಚಿವ ಡಾ.ಕೆ.ಸುಧಾಕರ್

Team Newsnap
1 Min Read
  • ರಾಜ್ಯಕ್ಕೆ ಹೊಸ ಆರೋಗ್ಯ ನೀತಿ
  • ರಾಜ್ಯಕ್ಕೆ ಸಿಗಲಿದೆ ಏಮ್ಸ್ ಸಂಸ್ಥೆ

ರಾಜ್ಯಕ್ಕೆ ಹೆಚ್ಚು ವೈದ್ಯರು ಅಗತ್ಯವಿದೆ. ಹೀಗಾಗಿ ಹೆಚ್ಚು ವೈದ್ಯಕೀಯ ಕಾಲೇಜುಗಳ ಅಗತ್ಯವಿದೆ. ಇದಕ್ಕಾಗಿ ಖಾಸಗಿ ಸಹಭಾಗಿತ್ವದಲ್ಲಿ ವೈದ್ಯಕೀಯ ಕಾಲೇಜು ನಿರ್ಮಿಸುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಶಿವಾಜಿನಗರದಲ್ಲಿ ಶ್ರೀ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ ನೂತನ ಕಟ್ಟಡವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉದ್ಘಾಟಿಸಿದರು.

ನಂತರ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್, ಒಂದು ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ 600-700 ಕೋಟಿ ರೂ. ಬೇಕಾಗುತ್ತದೆ. ಖಾಸಗಿ-ಸರ್ಕಾರಿ ಸಹಭಾಗಿತ್ವದಲ್ಲಿ ಕಾಲೇಜು ನಿರ್ಮಿಸಿದರೆ ವಿದ್ಯಾರ್ಥಿಗಳಿಗೆ ಉಚಿತ ವಿದ್ಯಾಭ್ಯಾಸ, ಜನರಿಗೆ ಉಚಿತ ಆರೋಗ್ಯ ಸೌಲಭ್ಯ ನೀಡಬಹುದು. ಗುಜರಾತ್ ನಲ್ಲಿ ಈ ರೀತಿ ಪ್ರಯತ್ನ ನಡೆಯುತ್ತಿದೆ. ನಮ್ಮಲ್ಲೂ ಈ ಬಗೆಯ ಪ್ರಯತ್ನ ಮಾಡಲಾಗುವುದು ಎಂದರು.

ರಾಜ್ಯಕ್ಕೆ ಏಮ್ಸ್ ಸಂಸ್ಥೆ :

ರಾಜ್ಯದಲ್ಲೂ ಏಮ್ಸ್ ಸಂಸ್ಥೆಯನ್ನು ತರಬೇಕು ಎಂಬ ಉದ್ದೇಶ ಇದೆ. ಏಮ್ಸ್ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರದ ಅನುಮತಿ ಪಡೆಯುವ ಪ್ರಕ್ರಿಯೆ ನಡೆಯುತ್ತದೆ. ಶೀಘ್ರದಲ್ಲೇ ಏಮ್ಸ್ ಕೂಡ ರಾಜ್ಯಕ್ಕೆ ಸಿಗಲಿದೆ ಎಂದು ತಿಳಿಸಿದರು.

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರು 2002 ರಲ್ಲೇ ಆರೋಗ್ಯ ನೀತಿಯನ್ನು ತಂದಿದ್ದರು. ಅದಾದ ಬಳಿಕ ಪ್ರಧಾನಿ ನರೇಂದ್ರ ಮೋದಿಯವರು ಆರೋಗ್ಯ ನೀತಿ ಜಾರಿ ಮಾಡಿದ್ದಾರೆ. ರಾಜ್ಯದಲ್ಲೀಗ ಹೊಸ ಆರೋಗ್ಯ ನೀತಿ ರೂಪಿಸಲಾಗುತ್ತಿದೆ. ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣವನ್ನು ಒಳಗೊಂಡ ನೀತಿ ತರಲಾಗುವುದು ಎಂದು ಮಾಹಿತಿ ನೀಡಿದರು.

ಮೂವರ ಸಂಪರ್ಕಿತರ ಪತ್ತೆಗೆ ಕ್ರಮ

ಯು.ಕೆ.ಯಿಂದ ಬಂದವರ ಪೈಕಿ 26 ಮಂದಿಯ ಮಾದರಿಗಳನ್ನು ನಿಮ್ಹಾನ್ಸ್ ಗೆ ಕಳುಹಿಸಿದ್ದು, ಮೂವರಲ್ಲಿ ಹೊಸ ಪ್ರಭೇದದ ಕೊರೊನಾ ವೈರಸ್ ಪತ್ತೆಯಾಗಿದೆ. ಈ ರೋಗಿಗಳನ್ನು ಆಸ್ಪತ್ರೆಗೆ ದಾಖಲಿಸಿದ್ದು, ಸಂಪರ್ಕಿತರನ್ನು ಪತ್ತೆ ಮಾಡಲಾಗುತ್ತಿದೆ ಎಂದು ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

Share This Article
Leave a comment