ಮಂಡ್ಯದಲ್ಲಿ ಅಕ್ಟೋಬರ್ 10 ರಂದು ಕಾಂಗ್ರೆಸ್‌ ನಿಂದ ರೈತಧ್ವನಿ ಸಮಾವೇಶ – ನರೇಂದ್ರಸ್ವಾಮಿ

Team Newsnap
2 Min Read

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತ ವಿರೋಧಿ ಕಾಯ್ದೆಗಳನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿದ್ದು, ಇದರ ಬಗ್ಗೆ ಹೋರಾಟ ರೂಪಿಸುವ ಸಲುವಾಗಿ ರೈತ ಸಮ್ಮೇಳವನ್ನು ಅ.10ರಂದು ಬೆಳಿಗ್ಗೆ 10.30ಕ್ಕೆ ಮಂಡ್ಯ ನಗರದ ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ಪಿ.ಎಂ.ನರೇಂದ್ರಸ್ವಾಮಿ ತಿಳಿಸಿದರು.

ರಾಷ್ಟ್ರೀಯ ಪಕ್ಷವಾದ ಕಾಂಗ್ರೆಸ್ ರೈತ ವಿರೋಧಿ ಕಾಯ್ದೆಗಳ ವಿರೋಧಿಸಿ ರಾಷ್ಟ್ರವ್ಯಾಪಿ ಆಂದೋಲನ ಹಮ್ಮಿಕೊಂಡಿದೆ. ಇದರ ಅಂಗವಾಗಿ ರೈತ ಸಮ್ಮೇಳನ ಹಮ್ಮಿಕೊಂಡಿದ್ದು, ರೈತ ಮುಖಂಡರು ಹಾಗೂ ರೈತರ ಜತೆ ಚರ್ಚಿಸಿ ಮುಂದಿನ ಹೋರಾಟ ರೂಪಿಸಲಾಗುವುದು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಸಮ್ಮೇಳನದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ರಾಜ್ಯ ಉಸ್ತುವಾರಿ ರಣಜಿತ್ ಸಿಂಗ್ ಸುರ್ಜಾಲ, ವಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ, ಮಾಜಿ ಸಚಿವರಾದ ಮಲ್ಲಿಕಾರ್ಜುನ ಖರ್ಗೆ, ಎಚ್.ಮುನಿಯಪ್ಪ, ಎನ್. ಚಲುವರಾಯಸ್ವಾಮಿ, ರೈತ ಮುಖಂಡರಾದ ಕೋಡಿಹಳ್ಳಿ ಚಂದ್ರಶೇಖರ್, ಚಾಮರಸ ಪಾಟೀಲ್, ಗಾಯತ್ರಿ, ಡಾ. ವಾಸು, ಸುನಂದಾ ಜಯರಾಂ ಸಮ್ಮೇಳನದಲ್ಲಿ ಭಾಗವಹಿಸಿ ರೈತರೊಂದಿಗೆ ಸಂವಾದ ಹಾಗೂ ಚರ್ಚೆ ನಡೆಸಲಿದ್ದಾರೆ ಎಂದರು.

ಸಮ್ಮೇಳನದಲ್ಲಿ ಚರ್ಚಿತವಾಗುವ ವಿಷಯಗಳ ಕುರಿತು ರೈತರಿಗೆ ಜಾಗೃತಿ ಮೂಡಿಸಿ ರೈತ ವಿರೋಧಿ ಕಾಯ್ದೆಗಳ ವಿರುದ್ಧ ರಾಜ್ಯವ್ಯಾಪಿ ಹೋರಾಟ ರೂಪಿಸಲಾಗುವುದು. ಸಮ್ಮೇಳನದಲ್ಲಿ ಕೋವಿಡ್-19ರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಲಾಗುವುದು ಎಂದು ತಿಳಿಸಿದರು.

ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರ ಅವಧಿಯಲ್ಲಿ ಭೂ ಸೂಧಾರಣೆ, ಎಪಿಎಂಸಿ ಕಾಯ್ದೆಗಳಿಗೆ ತಿದ್ದುಪಡಿ ತರಲು ಯೋಜನೆ ರೂಪಿಸಿದ್ದು ನಿಜ. ಆದರೆ, ಅದರ ಸಾಧಕ-ಬಾಧಕಗಳ ಬಗ್ಗೆ ರೈತರೊಂದಿಗೆ ಚರ್ಚಿಸಿ ಜಾರಿಗೆ ತರಲು ಉದ್ದೇಶಿಸಲಾಗಿತ್ತು. ಆದರೆ, ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರ್ಕಾರಗಳು ಯಾವುದೇ ಚರ್ಚೆಗೆ ಅವಕಾಶ ನೀಡದೆ ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದು ಬಂಡವಾಳಶಾಹಿಗಳಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ. ಗಂಗಾಧರ್, ಮಾಜಿ ಶಾಸಕ ರಮೇಶ್‍ಬಾಬು ಬಂಡಿಸಿದ್ದೇಗೌಡ, ಮುಖಂಡರಾದ ಅಮರಾವತಿ ಚಂದ್ರಶೇಖರ್, ಎಚ್.ಕೆ.ರುದ್ರಪ್ಪ, ರಾಮಲಿಂಗಯ್ಯ, ಅಂಜನಾ ಶ್ರೀಕಾಂತ್ ಇದ್ದರು.

narendra swamy
ಕಾಂಗ್ರೆಸ್ ಶಕ್ತಿ ಕುಂದಿಸಲು ಸಿಬಿಐ ದಾಳಿ :
 ವಿರೋಧ ಪಕ್ಷವಾದ ಕಾಂಗ್ರೆಸ್ ಹಾಗೂ ಪಕ್ಷದ ಪ್ರಭಾವಿ ನಾಯಕರನ್ನು ಶಕ್ತಿಹೀನರನ್ನಾಗಿ ಮಾಡಲು ಕೇಂದ್ರದ ಬಿಜೆಪಿ ಸರ್ಕಾರವು ಸಿಬಿಐ, ಇಡಿ ಮತ್ತು ಐಟಿಯಂತಹ ಸ್ವಾಯತ್ತ ಸಂಸ್ಥೆಗಳನ್ನು ಅಸ್ತ್ರವಾಗಿ ಬಳಸಿಕೊಂಡು ದಾಳಿ ಮಾಡಿಸುತ್ತಿದೆ. ಇದು ದೇಶದ ಬಿಜೆಪಿಯೇತರ ಎಲ್ಲ ರಾಜ್ಯಗಳಲ್ಲೂ ನಡೆಯುತ್ತಿದೆ.
ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಸಿಬಿಐ, ಇಡಿ ಬಳಸಿ ಶಕ್ತಿಹೀನರನ್ನಾಗಿ ಮಾಡಬಹುದು ಎಂದು ಕೇಂದ್ರ ಸರ್ಕಾರವು ತಿಳಿದಿದ್ದರೆ ಅದು ಎಂದೂ ಫಲಿಸದು. ಅವರು ಯಾವುದೇ ತಪ್ಪು ಮಾಡಿಲ್ಲ. ಇಡಿಯಂತಹ ತನಿಖೆ ಎದುರಿಸಿ ಬಂದಿದ್ದಾರೆ. ಅಲ್ಲೇ ಯಾವುದೇ ತಪ್ಪುಗಳು ಕಂಡುಬಂದಿಲ್ಲ. ಕೇಂದ್ರ ಸರ್ಕಾರವನ್ನು ಯಾರು ವಿರೋಧಿಸುತ್ತಾರೋ ಅಂತಹವರ ವಿರುದ್ಧ ಸಿಬಿಐ, ಇಡಿಯಂತಹ ಸ್ವಾಯತ್ತ ಸಂಸ್ಥೆಗಳನ್ನು ಬಿಟ್ಟು ದಾಳಿ ನಡೆಸುವುದೇ ಕಾಯಕವಾಗಿದೆ.
                                     -ಪಿ.ಎಂ.ನರೇಂದ್ರಸ್ವಾಮಿ, ಮಾಜಿ ಸಚಿವರು
Share This Article
Leave a comment