ಸಹಕಾರ ಇಲಾಖೆಯು ರೈತರ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿದ್ದು, ರೈತರು ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುವಂತೆ ನೆರವಾಗಲು ಸಹಕಾರ ಬ್ಯಾಂಕ್‍ಗಳ ಮೂಲಕ 24 ಲಕ್ಷದ 50 ಸಾವಿರ ರೈತರಿಗೆ 15 ಸಾವಿರದ 300 ಕೋಟಿ ರೂ.ಗಳ ಸಾಲ ಸೌಲಭ್ಯ ನೀಡುವ ಗುರಿ ಹೊಂದಲಾಗಿದೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.
ಮಂಗಳವಾರ ಮೈಸೂರಿನ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ನಡೆದ 72ನೇ ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಈಗಾಗಲೇ 19 ಲಕ್ಷದ 50 ಸಾವಿರ ರೈತರಿಗೆ 12 ಸಾವಿರದ 500 ಕೋಟಿ ರೂ.ಗಳ ಸಾಲ ಸೌಲಭ್ಯವನ್ನು ನೀಡಲಾಗಿದೆ. ರೈತರಿಗೆ ತಲುಪುವುದನ್ನು ಪರಿಶೀಲಿಸಲು ಖುದ್ದು ಡಿಸಿಸಿ ಬ್ಯಾಂಕ್‍ಗಳಿಗೆ ಭೇಟಿ ನೀಡುತ್ತಿದ್ದೇನೆ ಎಂದು ಮಾಹಿತಿ ನೀಡಿದರು.
ಕೋರೊನಾ ವೈರಾಣುವಿನ ವಿರುದ್ಧ ಹೋರಾಡುವ ಲಸಿಕೆಯನ್ನು ದೇಶೀಯವಾಗಿ ಅಭಿವೃದ್ಧಿಪಡಿಸಲಾಗಿದ್ದು, ಲಸಿಕೆ ನೀಡುವ ಪ್ರಕ್ರಿಯೆ ಈಗಾಗಲೇ ಎಲ್ಲಾ ಜಿಲ್ಲೆಗಳಲ್ಲಿ ಆರಂಭವಾಗಿದೆ. ಲಸಿಕೆ ವಿತರಣೆಯಲ್ಲಿಯೂ ಕರ್ನಾಟಕವೇ ಮುಂದೆ ಇರುವುದು ಸಂತಸದ ಸಂಗತಿಯಾಗಿದೆ ಎಂದರು.
ಆಡಳಿತವನ್ನು ಜನರ ಬಳಿಗೆ ಕೊಂಡೊಯ್ದು ಅವರ ಸಮಸ್ಯೆಗಳನ್ನು ತಳಮಟ್ಟದಿಂದಲೇ ಪರಿಹರಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಎಂಬ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಇನ್ನು ಮುಂದೆ ಫೆಬ್ರವರಿಯಿಂದ ಪ್ರತಿ ತಿಂಗಳ ಮೂರನೇ ಶನಿವಾರದಂದು ಜಿಲ್ಲಾಧಿಕಾರಿಗಳು ಸೇರಿದಂತೆ ಅಧಿಕಾರಿಗಳು ಕಡ್ಡಾಯವಾಗಿ ಗ್ರಾಮಗಳಿಗೆ ಭೇಟಿ ನೀಡಿ, ವಾಸ್ತವ್ಯ ಮಾಡಿ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಾರೆ. ಇದರಿಂದ ಹಳ್ಳಿಯ ಜನರು ತಾಲ್ಲೂಕು ಕಚೇರಿ, ಜಿಲ್ಲಾಧಿಕಾರಿಗಳ ಕಚೇರಿಗೆ ಅಲೆಯುವುದು ತಪ್ಪುತ್ತದೆ ಎಂದು ಹೇಳಿದರು.
ಒಂದು ಜಿಲ್ಲೆ ಒಂದು ಉತ್ಪನ್ನ ಕಾರ್ಯಕ್ರಮದಲ್ಲಿ ಮೈಸೂರು ಜಿಲ್ಲೆಯಲ್ಲಿ ಬಾಳೆಯನ್ನು ಆಯ್ಕೆ ಮಾಡಲಾಗಿದೆ. ಈ ಜಿಲ್ಲೆಯಲ್ಲಿ 12 ಸಾವಿರ ಹೆಕ್ಟೇರ್‌ನಲ್ಲಿ ರೈತರು ಬಾಳೆ ಬೆಳೆಯುತ್ತಿದ್ದಾರೆ. ಈ ಉತ್ಪನ್ನದ ಮೌಲ್ಯವರ್ಧನೆ, ಸಂಸ್ಕರಣೆ, ಪ್ಯಾಕಿಂಗ್, ಬ್ರಾಂಡ್ ಅಭಿವೃದ್ಧಿ, ಮಾರುಕಟ್ಟೆ ಪ್ರೋತ್ಸಾಹಿಸಲು ರೈತರಿಗೆ ತರಬೇತಿ ನೀಡಲಾಗುತ್ತದೆ ಎಂದರು.
ಮೈಸೂರು ಅಭಿವೃದ್ಧಿಗೆ ಹೆಚ್ಚು ಒತ್ತು
ಮೈಸೂರು ಮಹಾನಗರದಲ್ಲಿ 108 ಕೋಟಿ ರೂ. ವೆಚ್ಚದಲ್ಲಿ ಎಲ್ಲಾ ಬೀದಿ ದೀಪಗಳನ್ನು ಎಲ್.ಇ.ಡಿ. ದೀಪಗಳಾಗಿ ಪರಿವರ್ತಿಸಲು ಸರ್ಕಾರದ ಅನುಮೋದನೆ ದೊರೆತಿದೆ. ಮುಂದಿನ ಒಂದು ವರ್ಷದೊಳಗೆ ಅನುಷ್ಠಾನಗೊಳಿಸಲಾಗುವುದು ಎಂದು ಹೇಳಿದರು.
ನಗರದ ಸ್ವಚ್ಛತೆಯನ್ನು ಕಾಪಾಡಲು ಮೈಸೂರು ನಗರಕ್ಕೆ ಕೆಸರೆ ಮತ್ತು ರಾಯನಕೆರೆಯಲ್ಲಿ 41 ಕೋಟಿ ರೂ.ಗಳ ವೆಚ್ಚದಲ್ಲಿ ಎರಡು ಕಸ ವಿಲೇವಾರಿ ಘಟಕಗಳನ್ನು ಸ್ಥಾಪಿಸಲು ಟೆಂಡರ್ ಪ್ರಕ್ರಿಯೆ ಮುಗಿದಿದೆ. ಶೀಘ್ರದಲ್ಲೇ ಕಾಮಗಾರಿ ಆರಂಭಿಸಲಾಗುತ್ತದೆ ಎಂದರು.
ಮೈಸೂರು ಭಾಗದ ಜನರ ಅನುಕೂಲಕ್ಕಾಗಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಉತೃಷ್ಟ ಗುಣಮಟ್ಟದ ಗುಂಪು ವಸತಿ ಮನೆಗಳನ್ನು ನಿರ್ಮಿಸಿ ವಿತರಿಸಲು ಉದ್ದೇಶಿಸಲಾಗಿದೆ. ಮೈಸೂರಿನ ಪ್ರಮುಖ ಸ್ಥಳಗಳಲ್ಲಿ ಈ ಯೋಜನೆಯಡಿ ಸುಮಾರು 4000 ಮನೆಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದ್ದು, ಸಮೀಕ್ಷೆ ಕಾರ್ಯ ನಡೆಯುತ್ತಿದೆ ಎಂದು ಮಾಹಿತಿ ನೀಡಿದರು.
- ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ದಂಪತಿ
- 2024-25ನೇ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ
- 10ನೇ ತರಗತಿ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಅವಕಾಶ
- HMPV ವೈರಸ್ ಕರ್ನಾಟಕಕ್ಕೆ ಪ್ರವೇಶ: ಬೆಂಗಳೂರಿನಲ್ಲಿ 8 ತಿಂಗಳ ಮಗುವಿಗೆ ಸೋಂಕು ದೃಢ
- ಮಳೆ ನಿಂತರೂ ಮರದ ಹನಿ ನಿಲ್ಲದು
More Stories
ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ದಂಪತಿ
2024-25ನೇ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ
HMPV ವೈರಸ್ ಕರ್ನಾಟಕಕ್ಕೆ ಪ್ರವೇಶ: ಬೆಂಗಳೂರಿನಲ್ಲಿ 8 ತಿಂಗಳ ಮಗುವಿಗೆ ಸೋಂಕು ದೃಢ