ಕಾವೇರಿಗಾಗಿ ನಾಳೆ ಮಂಡ್ಯ ಬಂದ್ ಹಿನ್ನೆಲೆಯಲ್ಲಿ ಹೆಚ್ಚುವರಿ ಪೊಲೀಸ್ ಭದ್ರತೆ ನಿಯೋಜನೆ ಮಾಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.
ಮಂಡ್ಯ ಬಂದ್ ವಿಚಾರವಾಗಿ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಈಗಾಗಲೇ KRS , ಮಂಡ್ಯ ಜಿಲ್ಲೆಯಲ್ಲಿ ಹೆಚ್ಚುವರಿ ಪೊಲೀಸ್ ಭದ್ರತೆ ನಿಯೋಜನೆ ಮಾಡಲಾಗಿದೆ. ಹೆಚ್ಚುವರಿ ಕೆಎಸ್‌ಆರ್‌ಪಿ, ಆರ್‌ಎಎಫ್ ತುಕಡಿಯನ್ನ ನಿಯೋಜನೆ ಮಾಡಲಾಗಿದೆ.
ಪ್ರತಿಭಟನೆ ಸ್ಥಳಗಳಲ್ಲಿ ಬಿಗಿ ಬಂದೋಬಸ್ತ್ ಮಾಡಿದ್ದೇವೆ. ಪ್ರತಿಭಟನೆ ನಡೆಸುವವರು ಕಾನೂನು ಬಾಹಿರ ಚಟುವಟಿಕೆಗಳಿಗೆ ಆಸ್ಪದ ನೀಡಬಾರದು. ಒಂದು ವೇಳೆ ಆ ರೀತಿ ಮಾಡಿದ್ರೆ ಕಾನೂನು ರೀತಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.
ಪ್ರತಿಭಟನೆ ನಡೆಸುವುದು ಅವರ ಹಕ್ಕು. ಪ್ರತಿಭಟನೆ ಬಗ್ಗೆ ನಮಗೇನು ತಕರಾರು ಇಲ್ಲ. ರಾಜ್ಯದ ಹಿತ ಕಾಪಾಡಬೇಕು ನೀರು ಬಿಡಬಾರದು ಅಂತ ಹೇಳಿ ಸಂಘಟನೆಗಳು ಪ್ರತಿಭಟನೆ ಮಾಡ್ತಿದ್ದಾರೆ. ಆದರೆ ಯಾವುದೇ ರೀತಿಯಲ್ಲಿ ಸಾರ್ವಜನಿಕ ಆಸ್ತಿ ನಾಶ, ಜನ ಸಮುದಾಯಕ್ಕೆ ತೊಂದರೆ ಮಾಡಬಾರದು ಎಂದು ಎಚ್ಚರಿಕೆ ನೀಡಿದ್ದಾರೆ.
ಪ್ರತಿಭಟನೆ ಮೂಲಕ ಕಾನೂನು ಬಾಹಿರ ಚಟುವಟಿಕೆಗಳನ್ನ ಮಾಡಬಾರದು. ಒಂದು ವೇಳೆ ಅಂತಹ ಘಟನೆಗಳು ಕಂಡುಬಂದರೆ ಅದನ್ನ ನಿಯಂತ್ರಣ ಮಾಡಲು ಪೊಲೀಸ್ ಇಲಾಖೆ ಎಲ್ಲ ರೀತಿಯಲ್ಲೂ ಸಿದ್ಧವಾಗಿದೆ ಎಂದು ತಿಳಿಸಿದ್ದಾರೆ.
ಸುಪ್ರೀಂ ತೀರ್ಪಿನ ಕುರಿತು ಪ್ರತಿಕ್ರಿಯಿಸಿದ ಗೃಹಸಚಿವ ಜಿ.ಪರಮೇಶ್ವರ್, ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸುವ ಬಗ್ಗೆ ಇವತ್ತಿನ ಕ್ಯಾಬಿನೆಟ್ ನಲ್ಲಿ ಚರ್ಚೆ ಮಾಡುತ್ತೇವೆ. ಸುಗ್ರಿವಾಜ್ಞೆ ತರುವ ವಿಚಾರದ ಬಗ್ಗೆಯೂ ಚರ್ಚೆ ನಡೆಯಬಹುದು. ಸಿಎಂ ಮತ್ತು ನೀರಾವರಿ ಸಚಿವರು ದೆಹಲಿಗೆ ಹೋಗಿ ಬಂದಿದ್ದಾರೆ. ಎಲ್ಲಾ ವಿಚಾರಗಳ ಬಗ್ಗೆ ಕ್ಯಾಬಿನೆಟ್‌ನಲ್ಲಿ ಬ್ರೀಫ್ ಮಾಡೋ ಸಾಧ್ಯತೆ ಇದೆ. ಇವತ್ತು ಕ್ಯಾಬಿನೆಟ್ ಒಂದು ತೀರ್ಮಾನಕ್ಕೆ ಬರುತ್ತೇವೆ ಎಂದರು.