5 ವಾರಗಳಲ್ಲಿ ಎರಡನೇ ಬಾರಿ ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಹೇರಿಕೆ

Team Newsnap
1 Min Read

ತೀವ್ರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಶ್ರೀಲಂಕಾದಲ್ಲಿ ಮತ್ತೆ ತುರ್ತು ಪರಿಸ್ಥಿತಿ ಹೇರಲಾಗಿದೆ ,ಶ್ರೀಲಂಕಾ ಅಧ್ಯಕ್ಷ ಗೋಟಬಯ ರಾಜಪಕ್ಸೆ 5 ವಾರಗಳ ಅಂತರದಲ್ಲಿ ಎರಡನೇ ಬಾರಿಗೆ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ.

ಆರ್ಥಿಕ ಬಿಕ್ಕಟ್ಟಿನ ಬಳಿಕ ಶ್ರೀಲಂಕಾ ಅಧ್ಯಕ್ಷ ರಾಜಪಕ್ಸೆ ರಾಜೀನಾಮೆಗೆ ಆಗ್ರಹಿಸಿ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿದೆ. ಈ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಭದ್ರತಾ ಪಡೆಗಳಿಗೆ ಹೆಚ್ಚಿನ ಅಧಿಕಾರ ನೀಡಲಾಗಿದೆ.

ಕಳೆದ ಕೆಲ ತಿಂಗಳ ಬಳಿಕ ಶ್ರೀಲಂಕಾದಲ್ಲಿ ಅಗತ್ಯ ವಸ್ತುಗಳು, ಆಹಾರ ಸೇರಿದಂತೆ ತೈಲ ಸಿಗದೆ ಜನ ತತ್ತರಿಸಿ ಹೋಗಿದ್ದರು. ಆ ಬಳಿಕ ಜನ ಪ್ರತಿಭಟನೆಗೆ ಮುಂದಾಗಿದ್ದರು.

ನಿನ್ನೆ ಅಧ್ಯಕ್ಷರ ವಕ್ತಾರರು ತುರ್ತು ಪರಿಸ್ಥಿತಿಯ ಬಗ್ಗೆ ಮಾಹಿತಿ ನೀಡಿದ್ದು, ಸಾರ್ವಜನಿಕ ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ತಾವು ಕಠಿಣ ಕಾನೂನುಗಳನ್ನು ಜಾರಿಗೊಳಿಸುತ್ತಿದ್ದೇವೆ ಎಂದರು.

ಅಗತ್ಯ ಸೇವೆಗಳು ಹಾಗೂ ಶಾಂತಿ ಸುವ್ಯವಸ್ಥೆಗಳ ನಿರ್ವಹಣೆಯ ದೃಷ್ಟಿಯಿಂದ ಅಧ್ಯಕ್ಷರು ತಮ್ಮ ಅಧಿಕಾರ ಬಳಸಿ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ.

ರಾಜಪಕ್ಸೆ ರಾಜೀನಾಮೆಗೆ ಆಗ್ರಹಿಸಿ ಸಂಸತ್‍ನತ್ತ ಪ್ರತಿಭಟನಾ ಮೆರವಣಿಗೆ ಹೊರಟಿದ್ದ ವಿದ್ಯಾರ್ಥಿಗಳನ್ನು ಚದುರಿಸಲು ಅಶ್ರುವಾಯು ಪ್ರಯೋಗಿಸಲಾಗಿತ್ತು. ಇದೀಗ ತುರ್ತುಪರಿಸ್ಥಿತಿ ಹೇರಿಕೆ ಮಾಡಿರುವುದರಿಂದ ಸೇನೆಗೆ ಶಂಕಿತರನ್ನು ಬಂಧಿಸಿ ದೀರ್ಘಾವಧಿಯವರೆಗೂ ನ್ಯಾಯಾಂಗದ ಮೇಲ್ವಿಚಾರಣೆ ಇಲ್ಲದೇ ಬಂಧನದಲ್ಲಿಡುವುದಕ್ಕೆ ಸಾಧ್ಯವಾಗಲಿದೆ.

Share This Article
Leave a comment