ರೈತರು ಯಾರೂ ಪ್ರತಿಭಟನೆಯಲ್ಲಿ ಮೃತಪಟ್ಟ ದಾಖಲೆಗಳಿಲ್ಲ: ಪರಿಹಾರ ನೀಡುವ ಪ್ರಶ್ನೆಯೇ ಇಲ್ಲ: ಕೇಂದ್ರ ಸರ್ಕಾರ

Team Newsnap
1 Min Read

ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದಾಗ ರೈತರು ಮೃತಪಟ್ಟಿರುವ ಬಗ್ಗೆ ಸರ್ಕಾರದ ಬಳಿ ಯಾವುದೇ ದಾಖಲೆಗಳಿಲ್ಲ. ಹೀಗಾಗಿ ಪರಿಹಾರ ನೀಡುವ ಪ್ರಶ್ನೆಯೇ ಇಲ್ಲ

ಇದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್‌ ಸಂಸತ್‌ನಲ್ಲಿ ಲಿಖಿತ ಪ್ರತಿಕ್ರಿಯೆ.

ಸಂಸತ್‌ ಅಧಿವೇಶನದಲ್ಲಿ ರೈತರ ಪ್ರತಿಭಟನೆ ಕುರಿತು ಪ್ರತಿಪಕ್ಷಗಳು ಧ್ವನಿ ಎತ್ತಿದವು. ಪ್ರತಿಭಟನೆ ವೇಳೆ ಸಾವಿಗೀಡಾದ ರೈತರ ಕುಟುಂಬಗಳಿಗೆ ಹಣಕಾಸು ನೆರವು ನೀಡಲು ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದವು. ಇದಕ್ಕೆ ಪ್ರತಿಕ್ರಿಯಿಸಿರುವ ಕೃಷಿ ಸಚಿವರು, ಈ ಸಂಬಂಧ ಕೃಷಿ ಇಲಾಖೆಯಲ್ಲಿ ಯಾವುದೇ ದಾಖಲೆಗಳಿಲ್ಲ. ಆದ್ದರಿಂದ ಪರಿಹಾರ ನೀಡುವ ಪ್ರಶ್ನೆಯೇ ಬರುವುದಿಲ್ಲ ಎಂದು ತಿಳಿಸಿದ್ದಾರೆ.

ಕೇಂದ್ರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕಳೆದ ಒಂದು ವರ್ಷದಿಂದ ಸಾವಿರಾರು ಸಂಖ್ಯೆಯಲ್ಲಿ ರೈತರು ದೆಹಲಿಯ ಗಡಿಭಾಗಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ವರ್ಷದ ಅವಧಿಯಲ್ಲಿ ಸುಮಾರು 700 ರೈತರು ಪ್ರತಿಭಟನಾ ಸ್ಥಳದಲ್ಲಿ ಮೃತಪಟ್ಟಿದ್ದಾರೆಂದು ರೈತ ನಾಯಕರು ಹಾಗೂ ಪ್ರತಿಪಕ್ಷಗಳು ಹೇಳಿವೆ.

ಮಸೂದೆಗಳನ್ನು ಚರ್ಚೆಗೆ ಒಳಪಡಿಸದೇ ಅಂಗೀಕಾರ ಸರಿಯಲ್ಲ. ಪ್ರತಿಭಟನೆ ವೇಳೆ ನೂರಾರು ರೈತರು ಸಾವನ್ನಪ್ಪಿದ್ದಾರೆ. ಅವರಿಗೆ ಕೇಂದ್ರ ಸರ್ಕಾರ ಪರಿಹಾರ ನೀಡಬೇಕು. ಹೀಗಾಗಿ ಮಸೂದೆಯನ್ನು ಚರ್ಚೆಗೆ ಒಳಪಡಿಸಬೇಕು ಎಂದು ವಿಪಕ್ಷಗಳು ಒತ್ತಾಯಿಸಿದ್ದವು. ಪ್ರತಿಪಕ್ಷಗಳ ವಿರೋಧದ ನಡುವೆಯೂ ಮಸೂದೆಗೆ ಅಂಗೀಕಾರ ನೀಡಲಾಯಿತು.

Share This Article
Leave a comment