ಜೆಡಿಎಸ್ ಸೇರಿದಂತೆ ಯಾವ ಪಕ್ಷದ ಜೊತೆ ಒಪ್ಪಂದ ಇಲ್ಲ : ಅರುಣ್ ಸಿಂಗ್

Team Newsnap
1 Min Read

ಜೆಡಿಎಸ್ ಸೇರಿದಂತೆ ಯಾವುದೇ ಪಕ್ಷದೊಂದಿಗೆ ಒಳ, ಹೊರ ಒಪ್ಪಂದ ಮಾಡಿಕೊಳ್ಳುವುದಿಲ್ಲ.‌ ಹಳೇ ಮೈಸೂರು ಪ್ರಾಂತ್ಯದಲ್ಲಿ
ಮುಂಬರುವ ವಿಧಾನಸಭಾ ಚುನಾವಣೆಯಲ್ಲೂ ಅತಿ ಹೆಚ್ಚಿನ ಸ್ಥಾನ ಪಡೆಯುತ್ತೇವೆ ಎಂದು ಪಕ್ಷದ ರಾಜ್ಯ ಉಸ್ತುವಾರಿ ಅರುಣ್‌ಸಿಂಗ್ ವಿಶ್ವಾಸ ವ್ಯಕ್ತಪಡಿಸಿದರು.

ಮೈಸೂರಿನಲ್ಲಿ ಮಂಗಳವಾರ ವರದಿಗಾರರೊಂದಿಗೆ ಮಾತನಾಡಿದ. ಅರುಣ್ ಸಿಂಗ್ ಮುಂದಿನ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರುವುದೇ ಪಕ್ಷದ ದೃಢಸಂಕಲ್ಪವಾಗಿದೆ. ಯಾವ ಪಕ್ಷದೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ. ಜೆಡಿಎಸ್‌ನೊಂದಿಗೂ ಹೊಂದಾಣಿಕೆ ಇಲ್ಲ ಎಂದರು.

ರಾಜ್ಯ ಸರ್ಕಾರದಲ್ಲಿ ಯಾವುದೇ ಗೊಂದಲ ಇಲ್ಲ. ಎಲ್ಲ ಸಚಿವರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಬಸವರಾಜ ಬೊಮ್ಮಾಯಿ ಸರ್ಕಾರ ಒಳ್ಳೆಯ ಆಡಳಿತ ನೀಡುತ್ತಿದೆ ಎಂದು ಮೆಚ್ಚುಗೆ ಸೂಚಿಸಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸಂಘಟನೆಯ ಅನುಭವವಿದೆ. ಅದನ್ನು ಪಕ್ಷದ ಬೆಳವಣಿಗೆಗೆ ಉಪಯೋಗಿಸಿಕೊಳ್ಳಲಾಗುತ್ತದೆ ಎಂದು ಅರುಣ್‌ಸಿಂಗ್ ಪ್ರತಿಕ್ರಿಯಿಸಿದರು.

ಇದಕ್ಕೂ ಮುನ್ನ ಮಂಗಳವಾರ ಬೆಳಗ್ಗೆ ಅರುಣ್‌ಸಿಂಗ್ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿ ದೇವಿ ದರ್ಶನ ಪಡೆದರು. ಈ ಸಂದರ್ಭದಲ್ಲಿ ಮೈಸೂರು ಪಾಲಿಕೆ ಮೇಯರ್ ಸುನಂದಾ ಪಾಲನೇತ್ರ, ಸಂಸದ ಪ್ರತಾಪ್ ಸಿಂಹ ಮತ್ತಿತರ ಪ್ರಮುಖರು ಇದ್ದರು.

Share This Article
Leave a comment