ನಾಳೆಯಿಂದ 16 ಜಿಲ್ಲೆಗಳಲ್ಲಿ ಅನ್ ಲಾಕ್ ಮತ್ತಷ್ಟು ಸಡಿಲಿಕೆ: ಮೈಸೂರಿಗೆ ನಿರ್ಬಂಧ : ಸಿಎಂ

Team Newsnap
2 Min Read

ಕೊರೋನಾ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಅನ್‍ಲಾಕ್ ಅನ್ನು 16 ಜಿಲ್ಲೆಗಳಲ್ಲಿ ಮತ್ತಷ್ಟು ನಿಯಮ ಸಡಿಲಿಕೆ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ಪಾಸಿಟಿವಿಟಿ ದರದ ಆಧಾರದ ಮೇಲೆ ತಾಂತ್ರಿಕ ಸಲಹಾ ಸಮಿತಿಯ ಸಲಹೆ ಹಾಗೂ ಸಂಪುಟ ಸಹೋದ್ಯೋಗಿಗಳೊಂದಿಗೆ ಚರ್ಚಿಸಿ ಅನ್‍ಲಾಕ್ ಮಾಡಲಾಗುತ್ತಿದೆ ಎಂದರು

ಶೇ.5 ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವ ಜಿಲ್ಲೆಗಳಾದ ಉತ್ತರ ಕನ್ನಡ, ಬೆಳಗಾವಿ, ಮಂಡ್ಯ, ಕೊಪ್ಪಳ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಬೆಂಗಳೂರು ನಗರ (ಬಿಬಿಎಂಪಿ ಸೇರಿದಂತೆ), ಗದಗ, ರಾಯಚೂರು, ಬಾಗಲಕೋಟೆ, ಕಲಬುರಗಿ, ಹಾವೇರಿ, ರಾಮನಗರ, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳಿಗೆ ಸಂಜೆ 5 ಗಂಟೆಯವರೆಗೆ ಸಡಿಲಿಕೆ ನೀಡಲಾಗಿದೆ.

  • ಈ ಜಿಲ್ಲೆಗಳಲ್ಲಿ ಎಲ್ಲ ಅಂಗಡಿಗಳನ್ನು ಬೆಳಗ್ಗೆ 5 ರಿಂದ ಸಂಜೆ 5 ಗಂಟೆಯವರೆಗೆ ತೆರೆಯಲು ಅನುಮತಿ ನೀಡಲಾಗಿದೆ.
  • ಎಸಿ ಹಾಕದೇ ಹೋಟೆಲ್, ಕ್ಲಬ್ಸ್, ರೆಸ್ಟೋರೆಂಟ್‍ಗಳಲ್ಲಿ (ಮದ್ಯಪಾನ ಹೊರತುಪಡಿಸಿ) ಕುಳಿತು ತಿನ್ನಲು ಸಂಜೆ 5 ಗಂಟೆಯವರೆಗೆ ಶೇ.50 ಸಾಮರ್ಥ್ಯದೊಂದಿಗೆ ಅವಕಾಶ ನೀಡಲಾಗಿದೆ.
  • ಹೊರಾಂಗಣ ಚಿತ್ರೀಕರಣಕ್ಕೆ ಅವಕಾಶ ನೀಡಲಾಗಿದೆ.
  • ಬಸ್ ಮತ್ತು ಮೆಟ್ರೋದಲ್ಲಿ ಶೇ.50 ಸಾಮರ್ಥ್ಯದೊಂದಿಗೆ ಪ್ರಯಾಣಿಸಬಹುದು.
  • ಹೊರಾಂಗಣ ಕ್ರೀಡೆಗಳಿಗೆ ವೀಕ್ಷಕರಿಲ್ಲದೇ ಅನುಮತಿ ನೀಡಲಾಗಿದೆ.
  • ಸರ್ಕಾರಿ, ಖಾಸಗಿ ಕಚೇರಿಗಳಿಗೆ ಶೇ.50ರ ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಿಸಲು ಅನುಮತಿಸಿದೆ.
  • ಲಾಡ್ಜ್, ರೆಸಾರ್ಟ್, ಜಿಮ್ ಗಳಲ್ಲಿ ಶೇ.50 ಸಾಮರ್ಥ್ಯದೊಂದಿಗೆ (ಹವಾ ನಿಯಂತ್ರಣ ಇಲ್ಲದೇ) ಅವಕಾಶ ನೀಡಿದೆ.

13 ಜಿಲ್ಲೆಗಳಲ್ಲಿ ಸಡಿಲಿಕೆ ಯಥಾಸ್ಥಿತಿ:

ಶೇ.5ಕ್ಕಿಂತ ಹೆಚ್ಚಿನ ಪಾಸಿಟಿವಿಟಿ ದರ ಇರುವ 13 ಜಿಲ್ಲೆಗಳಾದ ಹಾಸನ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಕೊಡಗು, ಧಾರವಾಡ, ಬಳ್ಳಾರಿ, ಚಿತ್ರದುರ್ಗ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಜೂನ್ 11ರ ಆದೇಶದಲ್ಲಿ ನೀಡಿರುವ ಸಡಿಲಿಕೆಗಳು ಮಾತ್ರ ಅನ್ವಯಿಸುತ್ತವೆ.

ಮೈಸೂರಿನಲ್ಲಿ ಮಾತ್ರ ನಿರ್ಬಂಧ :

ಶೇ.10ಕ್ಕಿಂತ ಹೆಚ್ಚಿನ ಪಾಸಿಟಿವಿಟಿ ದರ ಇರುವ ಮೈಸೂರು ಜಿಲ್ಲೆಯಲ್ಲಿ ಯಥಾಸ್ಥಿತಿ ನಿರ್ಬಂಧಗಳು ಮುಂದುವರೆಯುತ್ತವೆ. ಅಲ್ಲದೆ ರಾಜ್ಯವ್ಯಾಪಿ ಅನ್ವಯವಾಗುವಂತೆ ಪ್ರತಿ ದಿನ ರಾತ್ರಿ 7 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಇರುತ್ತದೆ. ವಾರಾಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 7 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ಬಸ್ ಸಂಚಾರ ಶೇ.50ರಷ್ಟು ಪ್ರಯಾಣಿಕರಿಗೆ ಮಿತಿಗೊಳಿಸಿ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.

Share This Article
Leave a comment