ವಿರೋಧ ಪಕ್ಷಗಳ ವಾಗ್ದಾಳಿ ಹಾಗೂ ಸಾರ್ವಜನಿಕರ ವಿರೋಧಕ್ಕೆ ನಡುಗಿದ ರಾಜ್ಯ ಸರ್ಕಾರ ಕೊನೆಗೂ ಎಚ್ಚೆತ್ತುಕೊಂಡಿರುವ ವಿದ್ಯಾಗಮ ಯೋಜನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ನಿರ್ಧರಿಸಿದೆ.
ಈ ಬಗ್ಗೆ ಫೇಸ್ಬುಕ್ನಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸ್ಪಷ್ಟನೆ ನೀಡಿ,
ತಾತ್ಕಾಲಿಕವಾಗಿ ಈ ಯೋಜನೆಯನ್ನು ಸ್ಥಗಿತಗೊಳಿಸಲು ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ನಿರ್ದೇಶನ ನೀಡಿರುವುದಾಗಿ ತಿಳಿಸಿದ್ದಾರೆ.
ವಿದ್ಯಾಗಮ ಯೋಜನೆಗೆ ಭಾರೀ ವಿರೋಧ ವ್ಯಕ್ತವಾಗಿದ್ದರಿಂದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಿಗೆ ಈ ಯೋಜನೆಯನ್ನು ಸ್ಥಗಿತಗೊಳಿಸಲು ಸೂಚಿಸಿದ್ದರು. ಸಿಎಂ ಆದೇಶದ ಮೇರೆಗೆ ಈ ಯೋಜನೆಯನ್ನು ಕೈಬಿಡಲಾಗಿದೆ. ಜಿಲ್ಲಾವಾರು ಅಂಶಗಳ ಸ್ವೀಕಾರ ಹಾಗೂ ಅದರ ಅಸಮರ್ಪಕ ವಿಶ್ಲೇಷಣೆ ಪೂರ್ಣಗೊಳ್ಳುವವರೆಗೂ ವಿದ್ಯಾಗಮ ಯೋಜನೆಯನ್ನು ಸ್ಥಗಿತಗೊಳಿಸಲು ನಿರ್ಧಾರ ಮಾಡಲಾಗಿದೆ.
ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಸೇರಿದಂತೆ ಅನೇಕ ನಾಯಕರು ವಿದ್ಯಾಗಮ ಯೋಜನೆಗೆ ವಿರೋಧ ವ್ಯಕ್ತಪಡಿಸಿದ್ದರು.
ಸೋಮವಾರದೊಳಗೆ ವಿದ್ಯಾಗಮ ಯೋಜನೆಯನ್ನು ಕೈಬಿಡದಿದ್ದರೆ ನನ್ನ ಜೀವ ಹೋದರೂ ಪರವಾಗಿಲ್ಲ. ಮಂಗಳವಾರದಿಂದ ಸರ್ಕಾರದ ಅನಾಗರಿಕ, ನಿರ್ಲಜ್ಜ ನೀತಿ, ನಿರ್ಧಾರದ ವಿರುದ್ಧ ಅಹೋರಾತ್ರಿ ಧರಣಿ ಆರಂಭಿಸುತ್ತೇನೆ ಎಂದು ಹೆಚ್.ಡಿ. ಕುಮಾರಸ್ವಾಮಿ ಟ್ವೀಟ್ ಮೂಲಕ ಎಚ್ಚರಿಸಿದ್ದರು.
ಅದಾದ ಕೆಲವೇ ಗಂಟೆಗಳಲ್ಲಿ ರಾಜ್ಯ ಸರ್ಕಾರ ವಿದ್ಯಾಗಮ ಯೋಜನೆಯನ್ನು ಸ್ಥಗಿತಗೊಳಿಸಿ, ಆದೇಶ ಹೊರಡಿಸಿದೆ. ಶಿಕ್ಷಕರು ಹಾಗೂ ಪೋಷಕರಿಂದಲೂ ವಿದ್ಯಾಗಮ ಯೋಜನೆಗೆ ಭಾರೀ ವಿರೋಧ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಈ ಯೋಜನೆಯನ್ನು ರಾಜ್ಯ ಸರ್ಕಾರ ಸ್ಥಗಿತಗೊಳಿಸಿದೆ.
ಅಭಿಪ್ರಾಯಗಳಿಗೆ ಮಣಿಯದ ಸರ್ಕಾರ ಒತ್ತಡಕ್ಕೆ ಮಾತ್ರ ಬಗ್ಗುತ್ತದೆ ಎಂದು ಕಾಣುತ್ತದೆ.ಹಲವಾರು ದಿನಗಳಿಂದ ವಿದ್ಯಾಗಮ ಸ್ಥಗಿತಕ್ಕೆ ಪೋಷಕರು,ಶಿಕ್ಷಕರ ಅಭಿಪ್ರಾಯಗಳಿಗೆ ಮಾನ್ಯತೆ ನೀಡಿರಲಿಲ್ಲ.ಈಗಲಾದರೂ ಸರಿಯಾದ ನಿರ್ಧಾರ ಕೈಗೊಂಡಿರುವುದು ಒಳ್ಳೆಯ ಬೆಳವಣಿಗೆ
– ಹೊಳಲು ಶ್ರೀಧರ್